ರಾಜ್ಯದಲ್ಲಿ ನಿಲ್ಲದ ಮಳೆಯ ಅಬ್ಬರ.. ಶಾಲಾ ಕಾಲೇಜಿಗೆ ರಜೆ ಘೋಷಣೆ..!

ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಭಾರೀ ಮಳೆ ಸುರಿಯುತ್ತಿದೆ. ಕಳೆದ ಇಪ್ಪತ್ತು ದಿನಗಳಿಂದ ಸೂರ್ಯೋದಯ ಕಾಣದೆ ಜನರು ಪರದಾಡುವಂತಾಗಿದೆ. ಮನೆ ಬಿಟ್ಟು ಹೊರಕ್ಕೆ ಬಂದರೆ ಮಳೆಯಲ್ಲಿ ಒದ್ದೆಯಾಗುವುದು ನಿಶ್ಚಿತ ಎನ್ನುವಂರಾಗಿದೆ. ಇನ್ನೂ ಮೂರ್ನಾಲ್ಕು ದಿನಗಳ ಕಾಲ ಇದೇ ವಾತಾವರಣ ಇರಲಿದೆ ಎನ್ನುವುದು ಹವಾಮಾನ ಇಲಾಖೆ ಮಾಹಿತಿ. ಇನ್ನೂ ಶಾಲಾ ಕಾಲೇಜು ಮಕ್ಕಳು ಈ ಮಳೆಯ ಸಂಕಷ್ಟದಲ್ಲಿ ಶಾಲಾ ಕಾಲೇಜು ತಲುಪುವುದು ದುಸ್ತರವಾಗಿದೆ. ಇದೇ ಕಾರಣದಿಂದ ರಜೆ ಘೋಷಣೆ ಮಾಡಿ ಆದೇಶ ಹೊರಡಿಸಲಾಗಿದೆ.

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ರಜೆ ಘೋಷಣೆ..!

ಸಾರ್ವಜನಿಕ ಶಿಕ್ಷಣ ಇಲಾಖೆ ಅಯುಕ್ತ ಡಾ. ವಿಶಾಲ್ ಆರ್ ಶಾಲಾ ಕಾಲೇಜುಗಳಿಗೆ ರಜೆ ನೀಡುವ ಕುರಿತು ಆದೇಶ ಹೊರಡಿಸಿದ್ದಾರೆ. ಸ್ಥಳೀಯ ಪರಿಸ್ಥಿತಿ ನೋಡಿಕೊಂಡು ರಜೆ ಘೋಷಣೆ ಮಾಡಿ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಡಿಡಿಪಿಐಗಳಿಗೆ ಆದೇಶದಲ್ಲಿ ತಿಳಿಸಲಾಗಿದೆ. ಮಳೆಯ ಪ್ರಮಾಣ, ಪರಿಸ್ಥಿತಿ ನೋಡಿಕೊಂಡು ರಜೆ ನೀಡಲು ಡಿಡಿಪಿಐಗಳಿಗೆ ಸೂಚನೆ ಕೊಡಲಾಗಿದೆ. ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರ ಆದೇಶದನ್ವಯ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ರಜೆ ಘೋಷಣೆ ಮಾಡಲಾಗಿದೆ.

Read this;

ಯಾವ ಯಾವ ಜಿಲ್ಲೆಗಳಲ್ಲಿ ರಜೆ ಘೋಷಣೆ..?

ಬೆಂಗಳೂರು, ತುಮಕೂರು, ಕೋಲಾರ, ರಾಮನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ರಜೆ ಘೋಷಣೆ ಮಾಡಿ ಆದೇಶ ಹೊರಡಿಸಲಾಗಿದೆ. ಇನ್ನುಳಿದ ಜಿಲ್ಲೆಗಳಲ್ಲಿ ಮಳೆಯ ಪರಿಸ್ಥಿತಿ ನೋಡಿಕೊಂಡು ಇಂದು ಬೆಳಗ್ಗೆ ಜಿಲ್ಲೆಯ ಶಿಕ್ಷಣ ಅಧಿಕಾರಿಗಳು ರಜೆ ಬಗ್ಗೆ ನಿರ್ಧಾರ ಕೈಗೊಳ್ಳುವ ನಿರೀಕ್ಷೆ ಇದೆ. ರಾಜ್ಯದ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ವರುಣನ ಆರ್ಭಟ ಜೋರಾಗಿದ್ದು, ರಾಜ್ಯಾದ್ಯಂತ ರಜೆ ಘೋಷಣೆ ಆಗುವ ಸಾಧ್ಯತೆಗಳಿವೆ. ಆದರೆ ಸಾರ್ವಜನಿಕ ಶಿಕ್ಷಣ ಆಯುಕ್ತ ಆದೇಶ ಜಾರಿಯಾಗುವುದು ತಡವಾದ ಕಾರಣ ಇನ್ನೂ ಕೆಲವು ಜಿಲ್ಲೆಗಳಲ್ಲಿ ಗೊಂದಲ ಉಂಟಾಗಲು ಕಾರಣವಾಗಿದೆ. ಆದರೆ ಇಂದು ಬೆಳೆಗ್ಗೆ ಎಲ್ಲಾ ಜಿಲ್ಲೆಗಳಲ್ಲಿ ರಜೆ ಘೋಷಣೆ ನಿರೀಕ್ಷಿತ.

ಜಿಲ್ಲಾಧಿಕಾರಿಗಳ ತುರ್ತು ಸಭೆ ಕರೆದ ಸಿಎಂ ಬಸವರಾಜ ಬೊಮ್ಮಾಯಿ..!

ಬೆಂಗಳೂರಲ್ಲಿ ವರುಣಾರ್ಭಟ ಜೋರಾಗಿದೆ. ಮೆಜೆಸ್ಟಿಕ್ ಹಾಗೂ ಕೆ.ಆರ್ ಮಾರುಕಟ್ಟೆ ಸುತ್ತಮುತ್ತ ಮಳೆ ಅಬ್ಬರಿಸುತ್ತಿದ್ದು, ಬಹುತೇಕ ರಸ್ತೆಗಳು ಕೆರೆಯ ಅಂಗಳದಂತೆ ಭಾಸವಾಗ್ತಿದೆ. ಬೆಂಗಳೂರು ಮಾತ್ರವಲ್ಲದೆ ರಾಜ್ಯದಲ್ಲಿ ಎಡೆಬಿಡದೆ ಸುರಿಯುತ್ತಿರುವ ಮಳೆ ಸಮಸ್ಯೆ ಹಾಗೂ ಪರಿಹಾರದ ಬಗ್ಗೆ ಚರ್ಚೆ ನಡೆಸಲು ಸಿಎಂ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಸಿಇಒಗಳ ಸಭೆ ಕರೆದಿದ್ದಾರೆ. ಇಂದು ಮಧ್ಯಾಹ್ನ 1 ಗಂಟೆಗೆ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ವೀಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಯಲಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಳೆಯಿಂದ ಹಾನಿಯಾಗಿರುವ ಪ್ರದೇಶಗಳು ಹಾಗೂಪರಿಹಾರ ಕ್ರಮಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ.

Related Posts

Don't Miss it !